ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಆಸ್ತಿ ನೋಂದಣಿ, ವ್ಯವಹಾರ ಹಾಗೂ ದೃಢೀಕರಣ ಪ್ರಕ್ರಿಯೆಗಳಲ್ಲಿ ಆಧಾರ್ ಸಂಖ್ಯೆ ಅಳವಡಿಕೆ ಹಾಗೂ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಕೆಲವು ಭಾಗಗಳಲ್ಲಿ ಸತ್ತ ವ್ಯಕ್ತಿಗಳ ಹೆಸರಿನಲ್ಲಿ ಆಸ್ತಿ ನೋಂದಣಿ, ಸತ್ತವರ ವಾರಸುದಾರರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ, ನಕಲಿ ವ್ಯಕ್ತಿಗಳ ಹೆಸರಲ್ಲಿ ದಾಖಲೆ ರಚಿಸಿ ಆಸ್ತಿ ನೋಂದಣಿ ಮಾಡಿಸುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ರೀತಿಯ ವಂಚನೆಗಳಿಂದ ಭೂ ವಿವಾದಗಳು, ಅಪರಾಧ ಪ್ರಕರಣಗಳು, ಸಾರ್ವಜನಿಕ ಅಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿರುವುದು ಕಂಡುಬಂದಿದೆ. ಇವುಗಳನ್ನು ಪ್ರಾಥಮಿಕ ಹಂತದಲ್ಲೇ ತಡೆಯುವ ಉದ್ದೇಶದಿಂದ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಆಧಾರ್ ದೃಢೀಕರಣದಿಂದ ನಕಲಿ ವ್ಯಕ್ತಿಗಳ ಪತ್ತೆ ಹಾಗೂ ವಂಚನೆ ತಡೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನೋಂದಣಿಗೆ ಸಂಬಂಧಿಸಿದಂತೆ ಖರೀದಿದಾರರು, ಮಾರಾಟಗಾರರು, ದಾನಿಗಳು, ಸ್ವೀಕರಿಸುವವರು ಹಾಗೂ ಸರ್ಕಾರದಿಂದ ನೇಮಿಸಲಾದ ಅಧಿಕಾರಿಗಳು ಸೇರಿದಂತೆ ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳ ಆಧಾರ್ ದೃಢೀಕರಣ ಕಡ್ಡಾಯವಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎಲ್ಲಾ ಉಪ ನೋಂದಣಾಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದೇಶದ ಪರಿಣಾಮಕಾರಿ ಅನುಷ್ಠಾನಕ್ಕೆ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಸಹಕಾರ ನೀಡಬೇಕೆಂದು ಸೂಚಿಸಲಾಗಿದೆ.




