ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯನ್ನು ಖಂಡಿಸಿ ಭಾನುವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಎದುರು ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ವೇಳೆ ಅಮೆರಿಕದ ಮರೈನ್ ಭದ್ರತಾ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 12 ಮಂದಿ ಪಾಕಿಸ್ತಾನಿ ಪ್ರತಿಭಟನಾಕಾರರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿರುವ ರಾಜತಾಂತ್ರಿಕ ವಲಯದ ನಿರ್ಬಂಧಿತ ಪ್ರದೇಶಗಳತ್ತ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದಾಗ ಈ ಗುಂಡಿನ ದಾಳಿ ನಡೆದಿದೆ. ಆದರೆ, ಸಾವು-ನೋವಿನ ನಿಖರ ಸಂಖ್ಯೆಯನ್ನು ಪಾಕಿಸ್ತಾನದ ಅಧಿಕಾರಿಗಳು ಹಾಗೂ ಅಮೆರಿಕದ ಅಧಿಕಾರಿಗಳು ಇದುವರೆಗೂ ಅಧಿಕೃತವಾಗಿ ದೃಢಪಡಿಸಿಲ್ಲ.
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಶಿಯಾ ಸಂಘಟನೆಗಳು ಕರಾಚಿಯ ರಾಯಭಾರಿ ವಲಯದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದವು. ಸುಲ್ತಾನಾಬಾದ್‌ನಿಂದ ಮೈ ಕೊಲಾಚಿ ಕಡೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು.
ಇದನ್ನು ಓದಿದ್ದೀರಾ? ತಾನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತಲ್ಲೋ: ಅಫ್ಘಾನ್ ಜೊತೆ ಪಾಕ್ ದೋಸ್ತಿ ಹಳಸಿದ್ದೆಲ್ಲಿ?
ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿ, ಬ್ಯಾರಿಕೇಡ್‌ಗಳನ್ನು ಮುರಿಯಲು ಯತ್ನಿಸಿದಾಗ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಂ.ಟಿ. ಖಾನ್ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರಮುಖ ಮಾರ್ಗಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದು, ಆ ಪ್ರದೇಶಗಳಿಗೆ ತೆರಳದಂತೆ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಮತ್ತು ಪ್ರತಿಭಟನಾಕಾರರು ಕಚೇರಿಯತ್ತ ಮುನ್ನುಗ್ಗುತ್ತಿದ್ದಂತೆ, ಕಚೇರಿಯೊಳಗಿದ್ದ ಅಮೆರಿಕದ ಮರೈನ್ ಭದ್ರತಾ ಸಿಬ್ಬಂದಿಯನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿತ್ತು. ಪಾಕಿಸ್ತಾನದ ಮಾಧ್ಯಮಗಳ ವರದಿಯ ಪ್ರಕಾರ, ಪ್ರತಿಭಟನಾಕಾರರು ರಾಯಭಾರಿ ಕಚೇರಿಯ ಭದ್ರತಾ ಬೇಲಿಯನ್ನು ಮುರಿಯಲು ಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ.





